
RCB:ಕೊಹ್ಲಿ(Virat Kohli), ಸಾಲ್ಟ್ ಅಬ್ಬರಕ್ಕೆ ತಲೆಬಾಗಿದ ರಾಜಸ್ಥಾನ್; ಆರ್‌ಸಿಬಿಗೆ ನಾಲ್ಕನೇ ಗೆಲುವು
ಜೈಪುರ್ : ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ (RCB )ಬೆಂಗಳೂರು ಟೂರ್ನಿಯಲ್ಲಿ ನಾಲ್ಕನೇ ಗೆಲುವನ್ನು ತನ್ನದಾಗಿಸಿಕೊಂಡಿದೆ.
ಟಾಸ್ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಬೌಲಿಂಗ್ ಆರಿಸಿಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 174 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆರಂಭಿಕ ಆಟಗಾರರಾದ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ 17.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿದೆ.
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್:
ತಂಡದ ಪರ ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿದರು. ಅಬ್ಬರದ ಆರಂಭ ಮಾಡದ ಈ ಜೋಡಿ ನಿಧಾನಗತಿಯಲ್ಲೇ ಇನ್ನಿಂಗ್ಸ್ ಆರಂಭಿಸಿತು. ಸಂಜು ಸ್ಯಾಮ್ಸನ್ 19 ರನ್ ಗಳಿಸಿ ಔಟ್ ಆದರೆ, ಯಶಸ್ವಿ ಜೈಸ್ವಾಲ್ 47 ಎಸೆತಗಳಲ್ಲಿ 10 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ 75 ರನ್ ಬಾರಿಸಿದರು. ಇನ್ನುಳಿದಂತೆ ರಿಯಾನ್ ಪರಾಗ್ 30, ಶಿಮ್ರಾನ್ ಹೆಟ್ಮಾಯೆರ್ 9, ನಿತಿಶ್ ರಾಣಾ ಅಜೇಯ 4 ಹಾಗೂ ಧ್ರುವ್ ಜುರೆಲ್ ಅಜೇಯ 35 ರನ್ ಬಾರಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಭುನವೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್‌ವುಡ್ ಹಾಗೂ ಕೃನಾಲ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್:
ತಂಡದ ಪರ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ(Virat kohli)ಕಣಕ್ಕಿಳಿದರು. ಉತ್ತಮ ಆರಂಭ ನೀಡಿದ ಈ ಜೋಡಿ ಟೂರ್ನಿಯಲ್ಲಿ ಮೂರನೇ ಬಾರಿಗೆ ಓಪನಿಂಗ್‌ನಲ್ಲಿ 50+ ರನ್ ಬಾರಿಸಿತು.

ಫಿಲ್ ಸಾಲ್ಟ್ 33 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 65 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ 62 ರನ್ ಬಾರಿಸಿ ಅಜೇಯರಾಗಿ ಉಳಿದರು. ದೇವದತ್ ಪಡಿಕ್ಕಲ್ ಅಜೇಯ 40 ( 28 ) ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಕುಮಾರ್ ಕಾರ್ತಿಕೇಯ ಒಂದು ವಿಕೆಟ್ ಪಡೆದರು.